Kannada Song lyrics - ಕನ್ನಡ ಸಾಹಿತ್ಯ - ಕನ್ನಡ ಹಾಡುಗಳ ಲಿರಿಕ್ಸ್ -

ಕನ್ನಡ ಚಲನಚಿತ್ರ ಗೀತೆಗಳ , ಕವನಗಳ , ಜನಪದ ಗೀತೆಗಳ , ವಚನಗಳ , ದಾಸರ ಪದಗಳ , ಭಾವಗೀತೆಗಳ ಸಂಗ್ರಹ ...

Monday, August 28, 2017

ಧರಣಿ ಮಂಡಲ ಮಧ್ಯದೊಳಗೆ - ಗೋವಿನ ಹಾಡು (Kannada Janapada song lyrics)

  Sandeep T Gowda       Monday, August 28, 2017
ಧರಣಿ ಮಂಡಲ ಮಧ್ಯದೊಳಗೆ
ಮೆರೆಯುತಿಹ ಕರ್ನಾಟ ದೇಶದೊಳು
ಇರುವ ಕಾಳಿಂಗನೆಂಬ ಗೊಲ್ಲನ
ಪರಿಯ ನಾನೆಂತು ಪೇಳ್ವೆನು.

ಎಳೆಯ ಮಾವಿನ ಮರದ ಕೆಳಗೆ
ಕೊಳಲನೂದುವ ಗೊಲ್ಲಗೌಡನು
ಬಳಸಿ ನಿಂದ ತುರುಗಳನ್ನು
ಬಳಿಗೆ ಕರೆದನು ಹರುಷದಿ.

ಗಂಗೆ ಬಾರೇ ಗೌರಿ ಬಾರೇ
ತುಂಗಭದ್ರೆ ತಾಯಿ ಬಾರೇ
ಕಾಮಧೇನು ನೀನು ಬಾರೆ
ಎಂದು ಗೊಲ್ಲನು ಕರೆದನು.

ಗೊಲ್ಲ ಕರೆದಾ ಧ್ವನಿಯ ಕೇಳಿ
ಎಲ್ಲ ಹಸುಗಳು ಬಂದು ನೀಂತು
ಚೆಲ್ಲಿ ಸೂಸಿ ಹಾಲು ಕರೆಯಲು
ಅಲ್ಲಿ ತುಂಬಿತು ಬಿಂದಿಗೆ.

ಹಬ್ಬಿದಾ ಮಲೆ ಮಧ್ಯದೊಳಗೆ
ಅರ್ಬುತಾನಿದೆಂಬ ವ್ಯಾಘ್ರನು
ಅಬ್ಬರಿಸಿ ಹಸಿ ಹಸಿದು ಬೆಟ್ಟದ
ಕಿಬ್ಬಿಯೊಳು ತಾನಿದ್ದನು.

ಸಿಡಿದು ರೋಷದಿ ಮೊರೆಯುತಾ ಹುಲಿ
ಘುಡುಘುಡಿಸಿ ಭೋರಿಡುತ ಛಂಗನೆ
ತುಡುಕಲೆರಗಿದ ರಭಸಕಂಜಿ
ಚೆದರಿ ಹೋದವು ಹಸುಗಳು.

ಪುಣ್ಯಕೋಟಿ ಎಂಬ ಹಸುವು
ತನ್ನ ಕಂದನ ನೆನೆದುಕೊಂಡು
ಮುನ್ನ ಹಾಲನು ಕೊಡುವೆನೆನುತ
ಚೆಂದದಿ ತಾ ಬರುತಿರೆ.

ಇಂದೆನಗೆ ಆಹಾರ ಸಿಕ್ಕಿತು
ಎಂದು ಬೇಗನೆ ದುಷ್ಟ ವ್ಯಾಘ್ರನು
ಬಂದು ಬಳಸಿ ಅಡ್ಡಗಟ್ಟಿ
ನಿಂದನಾ ಹುಲಿರಾಯನು.

ಮೇಲೆ ಬಿದ್ದು ನಿನ್ನನೀಗಲೆ
ಬೀಳಹೊಯ್ವೆನು ನಿನ್ನ ಹೊಟ್ಟೆಯ
ಸೀಳಿ ಬಿಡುವೆನು ಎನುತ ಕೋಪದಿ
ಖೂಳ ವ್ಯಾಘ್ರನು ಕೂಗಲು.

ಒಂದು ಬಿನ್ನಹ ಹುಲಿಯೆ ಕೇಳು
ಕಂದನಿರುವನು ದೊಡ್ಡಿಯೊಳಗೆ
ಒಂದು ನಿಮಿಷದಿ ಮೊಲೆಯ ಕೊಟ್ಟು
ಬಂದು ಸೇರುವೆನಿಲ್ಲಿಗೆ.

ಹಸಿದ ವೇಳೆಗೆ ಸಿಕ್ಕಿದೊಡವೆಯ
ವಶವ ಮಾಡದೆ ಬಿಡಲು ನೀನು
ನುಸುಳಿ ಹೋಗುವೆ ಮತ್ತೆ ಬರುವೆಯ
ಹುಸಿಯನಾಡುವೆಯೆಂದಿತು.

ಸತ್ಯವೇ ನಮ್ಮ ತಾಯಿ ತಂದೆ
ಸತ್ಯವೇ ನಮ್ಮ ಬಂಧು ಬಳಗ
ಸತ್ಯ ವಾಕ್ಯಕೆ ತಪ್ಪಿ ನಡೆದರೆ
ಮೆಚ್ಚನಾ ಪರಮಾತ್ಮನು.

ಕೊಂದು ತಿನ್ನುವೆನೆಂಬ ಹುಲಿಗೆ
ಚೆಂದದಿಂದ ಭಾಷೆಯಿತ್ತು
ಕಂದನಿನ್ನನು ನೋಡಿ ಹೋಗುವೆ
ನೆಂದು ಬಂದೆನು ದೊಡ್ಡಿಗೆ.

ಆರ ಮೊಲೆಯನು ಕುಡಿಯಲಮ್ಮ
ಆರ ಸೇರಿ ಬದುಕಲಮ್ಮ
ಆರ ಬಳಿಯಲಿ ಮಲಗಲಮ್ಮ
ಆರು ನನಗೆ ಹಿತವರು.

ಅಮ್ಮಗಳಿರ ಅಕ್ಕಗಳಿರ
ನಮ್ಮ ತಾಯೊಡಹುಟ್ಟುಗಳಿರ
ನಿಮ್ಮ ಕಂದನೆಂದು ಕಾಣಿರಿ
ತಬ್ಬಲಿಯನೀ ಕರುವನು.

ಮುಂದೆ ಬಂದರೆ ಹಾಯಬೇಡಿ
ಹಿಂದೆ ಬಂದರೆ ಒದೆಯಬೇಡಿ
ಕಂದ ನಿಮ್ಮವನೆಂದು ಕಾಣಿರಿ
ತಬ್ಬಲಿಯನೀ ಕರುವನು.

ತಬ್ಬಲಿಯು ನೀನಾದೆ ಮಗನೆ
ಹೆಬ್ಬುಲಿಯ ಬಾಯನ್ನು ಹೊಗುವೆನು
ಇಬ್ಬರಾ ರುಣ ತೀರಿತೆಂದು
ತಬ್ಬಿ ಕೊಂಡಿತು ಕಂದನ.

ಗೋವು ಕರುವನು ಬಿಟ್ಟು ಬಂದು
ಸಾವಕಾಶವ ಮಾಡದಂತೆ
ಗವಿಯ ಬಾಗಿಲ ಸೇರಿನಿಂತು
ತವಕದಲಿ ಹುಲಿಗೆಂದಿತು.

ಖಂಡವಿದೆ ಕೋ ಮಾಂಸವಿದೆ ಕೋ
ಗುಂಡಿಗೆಯ ಬಿಸಿ ರಕ್ತವಿದೆಕೋ
ಚಂಡ ವ್ಯಾಘ್ರನೆ ನೀನಿದೆಲ್ಲವ
ನುಂಡು ಸಂತಸದಿಂದಿರು.

ಪುಣ್ಯಕೋಟಿಯ ಮಾತ ಕೇಳಿ
ಕಣ್ಣ ನೀರನು ಸುರಿಸಿ ನೊಂದು
ಕನ್ನೆಯಿವಳನು ಕೊಂದು ತಿಂದರೆ
ಮೆಚ್ಚನಾ ಪರಮಾತ್ಮನು.

ಎನ್ನ ಒಡಹುಟ್ಟಕ್ಕ ನೀನು
ನಿನ್ನ ಕೊಂದು ಏನ ಪಡೆವೆನು
ಎನ್ನುತಾ ಹುಲಿ ಹಾರಿ ನೆಗೆದು
== ತನ್ನ ಪ್ರಾಣವ ಬಿಟ್ಟಿತು. ==
logoblog

Thanks for reading ಧರಣಿ ಮಂಡಲ ಮಧ್ಯದೊಳಗೆ - ಗೋವಿನ ಹಾಡು (Kannada Janapada song lyrics)

Previous
« Prev Post

No comments:

Post a Comment

Note: Only a member of this blog may post a comment.